ಹೊಸಕೋಟೆ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ದೊಡ್ಡಕೋಲಿಗ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರಾದ ಶಿವಕುಮಾರ್ (ಕಂಟ್ರ‍್ಯಾಕ್ಟರ್) ಅವರ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಯಿತು.
ಈ ವೇಳೆ ಪಟಾಕಿ ಸಿಡಿಸಿ ಸಂಭ್ರಮ ವ್ಯಕ್ತಪಡಿಸಿದ ಕಾರ್ಯಕರ್ತರು ಹಾಗೂ ಗ್ರಾಮಸ್ಥರಿಗೆ ಸಿಹಿ ಮತ್ತು ಬಿರಿಯಾನಿ ವಿತರಿಸಲಾಯಿತು.
ನಂತರ ಮಾತನಾಡಿದ ಶಿವಕುಮಾರ್ (ಕಂಟ್ರ‍್ಯಾಕ್ಟರ್), ರಾಜ್ಯದ ೨೫ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರು ನಾಡಪ್ರಭು ಕೆಂಪೇಗೌಡ ಅವರ ದೂರದೃಷ್ಟಿಯ ಆಡಳಿತ ಮಾದರಿಯಲ್ಲಿ ರಾಜ್ಯವನ್ನು ಮುನ್ನಡೆಸಲಿ ಎಂದು ಆಶಿಸಿದರು. ಒಕ್ಕಲಿಗ ಸಮುದಾಯದ ನಾಯಕನಾದ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ಸಂತಸದ ವಿಚಾರವಾಗಿದ್ದು, ರಾಜ್ಯದ ಸಮಗ್ರ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಲಿ. ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರು ಜನಪರ ಕಾಳಜಿಯುಳ್ಳ ವಿದ್ಯಾವಂತ ವ್ಯಕ್ತಿಯಾಗಿದ್ದು,ಅವರಿಗೂ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ರವಿಕುಮಾರ್ ಎಂ.ಆರ್.ಸಿ (ಸೆರಾಮಿಕ್ ಟೈಲ್ಸ್), ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆಗೇರಿರುವುದು ಕಾಂಗ್ರೆಸ್ ಪಕ್ಷದ ಅಸಂಖ್ಯಾತ ಕಾರ್ಯಕರ್ತರಿಗೆ ಸಂತೋಷ ತಂದಿದೆ. ಸಂಕಷ್ಟದ ಸಂದರ್ಭಗಳಲ್ಲಿ ಪಕ್ಷವನ್ನು ಮುನ್ನಡೆಸಿದ ಅವರು ರಾಷ್ಟ್ರಮಟ್ಟದಲ್ಲಿ ಟ್ರಬಲ್‌ಶೂಟರ್ ಎಂದು ಗುರುತಿಸಿಕೊಂಡಿದ್ದು, ಅವರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆತಿದೆ.ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿಯಾಗಿ ತಮ್ಮ ಅವಧಿಯಲ್ಲಿ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಒತ್ತು ನೀಡುವ ಜೊತೆಗೆ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಿ ಮುಂದಿನ ವಿಧಾನಸಭಾ ಚುನಾವಣೆಗೆ ಸಜ್ಜುಗೊಳಿಸುವ ವಿಶ್ವಾಸವಿದೆ. ಮುಂದಿನ ಅವಧಿಯಲ್ಲೂ ಅವರೇ ಮುಖ್ಯಮಂತ್ರಿಯಾಗಬೇಕು ಎಂಬುದು ನಮ್ಮ ಅಭಿಲಾಷೆಯಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಶಿವಕುಮಾರ್, ಡೇರಿ ಅಧ್ಯಕ್ಷ ರಾಜಣ್ಣ, ರಮೇಶ್ ಸೇರಿದಂತೆ ದೊಡ್ಡಕೋಲಿಗ ಗ್ರಾಮದ ಅನೇಕ ಗ್ರಾಮಸ್ಥರು ಉಪಸ್ಥಿತರಿದ್ದರು.

